Tel: 7676775624 | Mail: info@yellowandred.in

Language: EN KAN

    Follow us :


ಕೃಷಿ ಚಟುವಟಿಕೆಗಳಿಗೆ ಮುಕ್ತ ವಾತಾವರಣ ಕಲ್ಪಿಸಿ : ಬಿ.ಸಿ.ಪಾಟೀಲ್

Posted date: 12 Apr, 2020

Powered by:     Yellow and Red

ಕೃಷಿ ಚಟುವಟಿಕೆಗಳಿಗೆ ಮುಕ್ತ ವಾತಾವರಣ ಕಲ್ಪಿಸಿ : ಬಿ.ಸಿ.ಪಾಟೀಲ್

ರಾಮನಗರ:ಏ/೧೧/೨೦/ಶನಿವಾರ. ಕೃಷಿ ಚಟುವಟಿಕೆಗಳಾದ ಬಿತ್ತನೆ, ನಾಟಿ, ಉಳುಮೆ ಸೇರಿದಂತೆ ಕೃಷಿ ಚಟುವಟಿಕೆಗಳಿಗೆ ಮುಕ್ತ ವಾತಾವರಣ ಕಲ್ಪಿಸಬೇಕು. ಕೃಷಿಕರು ಬೆಳೆಯಲು ಅವಕಾಶ ನೀಡಿದರೆ ಮಾತ್ರ ಮುಂದಿನ ದಿನಗಳಲ್ಲಿ ಆಹಾರ ಪೂರೈಸಲು ಸಾಧ್ಯವಾಗುತ್ತದೆ ಎಂದು ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಅವರು ಅಭಿಪ್ರಾಯಪಟ್ಟರು.


ಅವರು ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿಂದು ಕೋರೊನಾ (ಕೋವಿಡ್-೧೯) ಹಿನ್ನೆಲೆಯಲ್ಲಿ ಕೃಷಿ, ತೋಟಗಾರಿಕೆ, ಕೃಷಿ ಉತ್ಪನ್ನಗಳ ಸರಕು ಸಾಗಾಣಿಕೆ ಚಟುವಟಿಕೆ ಸಂಬಂಧ ಜನಪ್ರತಿನಿಧಿಗಳು, ರೈತ ಮುಖಂಡರು ಹಾಗೂ  ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.


ಕೃಷಿ, ತೋಟಗಾರಿಕೆ ಚಟುವಟಿಕೆಗಳ ಪೂರಕ ಕಾರ್ಯಗಳಿಗೆ ಅಗತ್ಯವಿರುವ ಬಿತ್ತನೆ ಬೀಜ, ರಸಗೊಬ್ಬರ, ರೈತ ಸಂಪರ್ಕ ಕೇಂದ್ರದ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದ ಸಚಿವರು  ಕೃಷಿ ಚಟುವಟಿಕೆಗೆ ಯಾವುದೇ ನಿರ್ಬಂಧ ಇಲ್ಲ. ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಅಗತ್ಯ ಬಿತ್ತನೆ  ಬೀಜ  ಹಾಗೂ ರಸಗೊಬ್ಬರಗಳ ದಾಸ್ತಾನು ಇದೆ ಎಂದರು.


ಯಾವುದೇ ಧಾರ್ಮಿಕ ಕಾರ್ಯ ಹಾಗೂ ಸಮಾರಂಭ ನಡೆಯದೇ ಇರುವ ಹಿನ್ನೆಲೆಯಲ್ಲಿ ಹೂವು ಬೆಳೆಗಾರರು ಸಂಕಷ್ಟದಲ್ಲಿದ್ದಾರೆ‌. ಹೂ ಬೆಳೆಗಾರರ ಕಷ್ಟದ ಪರಿಸ್ಥಿತಿಯ ಅರಿವು ಸರ್ಕಾರಕ್ಕಿದೆ. ಮುಖ್ಯಮಂತ್ರಿಯವರು ಈಗಾಗಲೆ ಸಮೀಕ್ಷೆ ನಡೆಸಿ ವರದಿ ಸಲ್ಲಿಸಲು ಸೂಚಿಸಿದ್ದಾರೆ ಎಂದರು.


ಕೋವಿಡ್-೧೯  ಹಿನ್ನೆಲೆಯಲ್ಲಿ ಎಲ್ಲರೂ ಸಂಕಷ್ಟದಲ್ಲಿದ್ದಾರೆ. ರೈತರು ಧೃತಿಗೆಡಬಾರದು. ಆತ್ಮಸ್ಥೈರ್ಯ ಕಳೆದುಕೊಳ್ಳಬಾರದು. ಸರ್ಕಾರ ರೈತರೊಂದಿಗಿದೆ. ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಿ ಸಂಗ್ರಹಿಸಲಾಗಿರುವ ಮಾಹಿತಿಯೊಂದಿಗೆ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದರು.


ಲೋಕಸಭಾ ಸದಸ್ಯರಾದ  ಡಿ.ಕೆ.ಸುರೇಶ್ ಅವರು ಮಾತನಾಡಿ ಜಿಲ್ಲೆಯಲ್ಲಿ ರಾಗಿ ಮುಖ್ಯ ಬೆಳೆಯಾಗಿದ್ದು, ಸರ್ಕಾರ ಬೆಂಬಲ ಬೆಲೆ ಯೋಜನೆಯಡಿ ಖರೀದಿಸುವ ದಿನಾಂಕವನ್ನು ವಿಸ್ತರಿಸಿ ಲಾಕ್ ಡೌನ್ ನಂತರ ಖರೀದಿಸಬೇಕು. ಬೆಳೆ ಸಮೀಕ್ಷೆ ಆ್ಯಪ್ ನಲ್ಲಿ ಇರುವ ಗೊಂದಲವನ್ನು  ಸರಿಪಡಿಸಿ ರಾಗಿ ಖರೀದಿಸಬೇಕು. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ರೈತರು ತರುವ ತರಕಾರಿಗಳಿಗೆ ಸರ್ಕಾರ  ಬೆಂಬಲ ಬೆಲೆ ನಿಗದಿಪಡಿಸಿ ಖರೀದಿಸಿ ಹಾಲು ನೀಡುತ್ತಿರುವ ರೀತಿಯಲ್ಲಿ ತರಕಾರಿಯನ್ನು ನೀಡುವಂತೆ ಸಚಿವರಿಗೆ  ಮನವಿ ಮಾಡಿದರು. 


ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಲಿಂಗಪ್ಪ, ಹೆಚ್.ಎಂ. ರೇವಣ್ಣ, ಎಸ್. ರವಿ, ಅ. ದೇವೇಗೌಡ, ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಇಕ್ರಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನೂಪ್ ಎ ಶೆಟ್ಟಿ, ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑